ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆಯಲು ಉತ್ತೇಜನ, ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ
ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆಯಲು ಉತ್ತೇಜನ, ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ
ಖಾಸಗಿ ಆಸ್ಪತ್ರೆಯಲ್ಲಿ ಹಣ ಪಾವತಿಸಿ ಕೋವಿಡ್-19 ಲಸಿಕೆ ಪಡೆಯಲು ಪ್ರೇರೇಪಿಸುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ದುಡ್ಡು ಕೊಟ್ಟು ಕೋವಿಡ್ ಲಸಿಕೆ ಪಡೆಯಲು ಪ್ರೇರೇಪಿಸುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ಸಿಗದೆ ಜನ ಪರದಾಡುತ್ತಿರುವ ಸಂದರ್ಭದಲ್ಲಿ ಸಂಸದರು ಖಾಸಗಿ ಆಸ್ಪತ್ರೆಗಳಲ್ಲಿ ಹಣ ಕೊಟ್ಟು ಲಸಿಕೆ ಹಾಕಿಸಿಕೊಳ್ಳಿ ಎಂದು ಪರೋಕ್ಷವಾಗಿ ಪ್ರಚಾರ ಮಾಡುತ್ತಿದ್ದಾರೆ. 900 ರೂ.ಗಳಿಗೆ ಕೋವಿಶೀಲ್ಡ್ ಲಸಿಕೆ ನೀಡುತ್ತಿರುವ ಬಗ್ಗೆ ಖಾಸಗಿ ಆಸ್ಪತ್ರೆಯೊಂದು ಸಂಸದರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿದೆ. ಇದೇ ಬ್ಯಾನರ್ ಇರುವ ಭಾವಚಿತ್ರವನ್ನು ಸಂಸದ ತೇಜಸ್ವಿ ಸೂರ್ಯ ಕೂಡ ಟ್ವೀಟ್ ಮಾಡಿ ಖಾಸಗಿ ಆಸ್ಪತ್ರೆಗಳಿಗೆ ಬೆಂಬಲ ನೀಡಿರುವುದಕ್ಕೆ ಟೀಕೆ ವ್ಯಕ್ತವಾಗಿದೆ.
ಸಾರ್ವಜನಿಕರು ಆಸ್ಪತ್ರೆಗಳ ಮುಂದೆ ಬೆಳಗ್ಗೆಯಿಂದ ಸಂಜೆವರೆಗೂ ಕಾದು ಕುಳಿತರೂ ಲಸಿಕೆ ಸಿಗುತ್ತಿಲ್ಲ. ಮತ್ತೊಂದೆಡೆ, ಜನಪ್ರತಿನಿಧಿಯಾಗಿರುವ ತೇಜಸ್ವಿ ಸೂರ್ಯ ಅವರೇ ಖಾಸಗಿ ಆಸ್ಪತ್ರೆಯಲ್ಲಿ 900 ರೂ. ಕೊಟ್ಟು ಲಸಿಕೆ ಪಡೆಯಲು ಪ್ರೇರೇಪಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
ಸರಕಾರಿ ಆಸ್ಪತ್ರೆಯಲ್ಲಿ ಸಿಗದ ಲಸಿಕೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುತ್ತಿರುವುದಾದರೂ ಹೇಗೆ? ಆಡಳಿತ ಪಕ್ಷದ ಸಂಸದರೇ ಖಾಸಗಿ ಆಸ್ಪತ್ರೆಗಳ ದಲ್ಲಾಳಿಯಾದ ಮೇಲೆ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹೇಗೆ ಸಿಗುತ್ತದೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.