ದೆಹಲಿಯಲ್ಲಿ ಬಸವರಾಜ ಬೊಮ್ಮಾಯಿ; ವರಿಷ್ಠರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಿದ್ದಾರೆ ನೂತನ ಸಿಎಂ

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ವರಿಷ್ಠರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಿದ್ದಾರೆ. ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.

ದೆಹಲಿಯಲ್ಲಿ ಬಸವರಾಜ ಬೊಮ್ಮಾಯಿ; ವರಿಷ್ಠರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಿದ್ದಾರೆ ನೂತನ ಸಿಎಂ
Linkup
ಹೊಸದಿಲ್ಲಿ: ನೂತನ ಸಿಎಂ ಅವರು ಪ್ರವಾಸದಲ್ಲಿದ್ದಾರೆ. ಶುಕ್ರವಾರ ಬೆಳಗ್ಗೆ ದೆಹಲಿಗೆ ತಲುಪಿದ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿಲಿದ್ದಾರೆ. ಬೆಳಗ್ಗೆ 6 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಅವರು ದೆಹಲಿಗೆ ತಲುಪಿದ್ದು ಮಾಧ್ಯಾಹ್ಮ 1 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಲಿದ್ದಾರೆ. ಇದಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.ಜೊತೆಗೆ ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರ ಜೊತೆಗೂ ಸಮಾಲೋಚನೆ ನಡೆಸಲಿದ್ದಾರೆ. ಶುಕ್ರವಾರ ದೆಹಲಿಯಲ್ಲೇ ಉಳಿದುಕೊಳ್ಳಲಿರುವ ಬಸವರಾಜ ಬೊಮ್ಮಾಯಿ ಅವರು ಶನಿವಾರ ವಾಪಸ್ ಆಗಲಿದ್ದಾರೆ. ಈ ನಡುವೆ ಸಂಪುಟ ರಚನೆ ವಿಚಾರವಾಗಿಯೂ ವರಿಷ್ಠರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿ ಶುಕ್ರವಾರಕ್ಕೆ ಮೂರು ದಿನಗಳಾಗುತ್ತಿವೆ. ಆದಷ್ಟು ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಬೇಕಾದ ಅನಿವಾರ್ಯತೆಯೂ ಅವರ ಮೇಲಿದೆ. ಈ ನಿಟ್ಟಿನಲ್ಲಿ ವರಿಷ್ಠರ ಜೊತೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ ತಮ್ಮ ಪಟ್ಟಿಗೆ ಅನುಮತಿ ಪಡೆಯುವ ಸಾಧ್ಯತೆ ಇದೆ. ಇದಾದ ಬಳಿಕ ಸಂಪುಟ ರಚನೆ ಆಗಲಿದೆ. ಈಗಾಗಲೇ ಸಾಕಷ್ಟು ಮಂದಿ ಆಕಾಂಕ್ಷಿಗಳು ಸಂಪುಟಕ್ಕೆ ಸೇರುವ ಇಚ್ಚೆ ವ್ಯಕ್ತಪಡಿಸಿದ್ದಾರೆ. ಆದರೆ ಹಿರಿಯ ಸಚಿವರಾಗಿದ್ದ ಜಗದೀಶ್ ಶೆಟ್ಟರ್‌ ಅವರು ನಾನು ಸಂಪುಟ ಸೇರ್ಪಡೆಯಾಗಲ್ಲ, ಬದಲಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದಿದ್ದಾರೆ. ಅವರ ಜೊತೆಗೂ ಮಾತುಕತೆ ನಡೆಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇನ್ನು ಯಡಿಯೂರಪ್ಪ ಸಂಪುಟದಲ್ಲಿ ಇದ್ದ ಕೆಲವರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಯಾರನ್ನು ಸಂಪುಟಕ್ಕೆ ಸೇರ್ಪಡೆ ಮಾಡಬೇಕು ಯಾರನ್ನು ಕೈಬಿಡಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ನಡೆದಿದ್ದು ವರಿಷ್ಠರ ಜೊತೆಗಿನ ಮಾತುಕತೆಯ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.