ಕೋವಿಡ್: ಮನೆಯಲ್ಲೇ ಚೇತರಿಸಿಕೊಳ್ಳುತ್ತಿದ್ದಾರೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ

ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ನಿಖಿಲ್ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

ಕೋವಿಡ್: ಮನೆಯಲ್ಲೇ ಚೇತರಿಸಿಕೊಳ್ಳುತ್ತಿದ್ದಾರೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ
Linkup
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿಗೆ ಪಾಸಿಟಿವ್ ಕಂಡುಬಂದಿತ್ತು. ಸೋಂಕು ತಗುಲಿದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದ ನಿಖಿಲ್ ಕುಮಾರಸ್ವಾಮಿ ನಂತರ ಮನೆಗೆ ಮರಳಿದರು. ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ನಿಖಿಲ್ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಮನೆಯಲ್ಲೇ ಗುಣಮುಖರಾಗುತ್ತಿರುವ ಬಗ್ಗೆ ನಟ ನಿಖಿಲ್ ಕುಮಾರಸ್ವಾಮಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಇನ್ಸ್ಟಾಗ್ರಾಮ್ ಪೋಸ್ಟ್ ''ಎಲ್ಲರಿಗೂ ನಮಸ್ಕಾರ. ನಾನು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಚೇತರಿಸಿಕೊಂಡಿದ್ದೇನೆ. ನನ್ನ ಆರೋಗ್ಯದ ಬಗ್ಗೆ ವಿಚಾರಿಸಲು ಎಷ್ಟೋ ಜನ ಫೋನ್ ಮಾಡುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ ಹಾಗೂ ಕಾಳಜಿಗೆ ನನ್ನ ಧನ್ಯವಾದಗಳು. ಈ ಕಠಿಣ ಸಮಯವನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಗೆಲ್ಲಬೇಕಿದೆ'' ಎಂದು ಸೋಷಿಯಲ್ ಮೀಡಿಯಾದಲ್ಲಿ ನಿಖಿಲ್ ಕುಮಾರ್ ಬರೆದುಕೊಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಜೊತೆಗೆ ತಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೂ ಕೋವಿಡ್-19 ಪಾಸಿಟಿವ್ ಕಂಡುಬಂದಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡ ಎಚ್.ಡಿ.ಕುಮಾರಸ್ವಾಮಿ ಇದೀಗ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 'ಜಾಗ್ವಾರ್', 'ಕುರುಕ್ಷೇತ್ರ', 'ಸೀತಾರಾಮ ಕಲ್ಯಾಣ' ಚಿತ್ರಗಳಲ್ಲಿ ಅಭಿನಯಿಸಿರುವ ನಿಖಿಲ್ ಕುಮಾರಸ್ವಾಮಿ ಇದೀಗ 'ರೈಡರ್' ಚಿತ್ರದಲ್ಲಿ ಬಿಜಿಯಾಗಿದ್ದಾರೆ. 'ರೈಡರ್' ಚಿತ್ರದ ಶೂಟಿಂಗ್ ಲೇಹ್, ಲಡಾಖ್‌ನಲ್ಲಿ ನಡೆದಿತ್ತು. ಶೂಟಿಂಗ್ ಬಳಿಕ ನಿಖಿಲ್ ಕುಮಾರಸ್ವಾಮಿ ಕೊರೊನಾ ವೈರಸ್ ಸೋಂಕು ತಗುಲಿತು.