ಪುನೀತ್ ನಿಧನ: ಬಿಬಿಎಂಪಿ ವ್ಯಾಪ್ತಿಯಲ್ಲಿ ಲಿಕ್ಕರ್ ಶಾಪ್‌ ಇನ್ನೆರಡು ದಿನ ಬಂದ್‌

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಲಿಕ್ಕರ್ ಶಾಪ್ ಮುಚ್ಚಲು ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಆದೇಶ ಹೊರಡಿಸಿದ್ದು, ಅಕ್ಟೋಬರ್‌ 31ರ ಮಧ್ಯರಾತ್ರಿವರೆಗೆ ಇದು ಜಾರಿಯಲ್ಲಿರಲಿದೆ.

ಪುನೀತ್ ನಿಧನ: ಬಿಬಿಎಂಪಿ ವ್ಯಾಪ್ತಿಯಲ್ಲಿ ಲಿಕ್ಕರ್ ಶಾಪ್‌ ಇನ್ನೆರಡು ದಿನ ಬಂದ್‌
Linkup
ಬೆಂಗಳೂರು: ಚಂದನವನದ ನಟ ಪುನೀತ್ ರಾಜ್‌ಕುಮಾರ್ ನಿಧನದ ಹಿನ್ನೆಲೆಯಲ್ಲಿ ಬೃಹತ್‌ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಲಿಕ್ಕರ್ ಶಾಪ್ ಮುಚ್ಚಲು ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ನಗರದಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಆದೇಶ ಹೊರಡಿಸಿದ್ದು, ಬೆಂಗಳೂರು ನಗರ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ , ಬಾರ್‌ ಮತ್ತು ರೆಸ್ಟೋರೆಂಟ್‌ ಹಾಗೂ ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಆದೇಶಿಸಿದ್ದಾರೆ. ಅಕ್ಟೋಬರ್‌ 31ರ ಮಧ್ಯ ರಾತ್ರಿ 12 ಗಂಟೆವರೆಗೆ ಈ ನಿಷೇಧ ಜಾರಿಯಲ್ಲಿ ಇರುತ್ತದೆ ಎಂದು ಕಮಲ್‌ ಪಂತ್‌ ಆದೇಶದಲ್ಲಿ ತಿಳಿಸಿದ್ದಾರೆ. ನಿಧನದ ಹಿನ್ನೆಲೆಯಲ್ಲಿ ಅವರ ನಿವಾಸ ಹಾಗೂ ನಗರದ ಹಲವು ಕಡೆಗಳಲ್ಲಿ ಜನರು ಜಮಾವಣೆಯಾಗಿದ್ದಾರೆ. ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಮದ್ಯದ ಅಮಲಿನಲ್ಲಿ ಕಿಡಿಗೇಡಿಗಳು ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ ಸಾಧ್ಯತೆಗಳಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಆದೇಶದಲ್ಲಿ ವಿವರಿಸಿದ್ದಾರೆ. ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿತ್ತು. ನಂತರ ನಗರದ ವಿಕ್ರಮ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಪುನೀತ್ ನಿಧನದ ಹಿನ್ನೆಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ವಿಕ್ರಮ್‌ ಆಸ್ಪತ್ರೆಯಲ್ಲಿ ನೆರೆದಿದ್ದರು. ಇದೀಗ ಅವರ ಮೃತದೇಹವನ್ನು ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದೆ. ಸಂಜೆ ವೇಳೆಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಆರಂಭವಾಗಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂಜಾಗರೂಕತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಅಷ್ಟೇ ಅಲ್ಲದೆ ಸದಾಶಿವ ನಗರದಲ್ಲಿರುವ ಪುನೀತ್ ರಾಜ್‌ಕುಮಾರ್‌ ನಿವಾಸದಲ್ಲೂ ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ.